ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಯುವ ಭಾರತ ಸುದ್ದಿ ತುಮಕೂರು:
ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಪರೀಕ್ಷೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿ ಸ್ನೇಹಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗುರುವಾರ(ಮಾರ್ಚ್ ೯)ದಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಆರಂಭವಾಗಿದ್ದು, ಮಾರ್ಚ್ ೨೯ರ ವರೆಗೆ ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ದ್ವಿತೀಯ ಪಿಯು ಪರೀಕ್ಷೆ ರಾಜ್ಯದ 1,109 ಕೇಂದ್ರಗಳಲ್ಲಿ ಗುರುವಾರ ಶಾಂತಿಯುತವಾಗಿ, ಸುಸೂತ್ರವಾಗಿ ನೆರವೇರಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೇ ಸಮವಸ್ತ್ರದಲ್ಲೇ ಬಂದು ಪರೀಕ್ಷೆ ಬರೆದಿದ್ದಾರೆ.
YuvaBharataha Latest Kannada News