ಬಿಲ್ಲವ / ಈಡಿಗ ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ
ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯ ಸರಕಾರ ಕೊನೆಗೂ ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿದೆ.
ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಈಡಿಗ/ಬಿಲ್ಲವ ಸೇರಿದಂತೆ ಇದರಲ್ಲಿನ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಕೆಲಸ ಮಾಡಲಿದೆ. ಬಿಲ್ಲವ/ಈಡಿಗ ಸೇರಿದಂತೆ ಒಟ್ಟು 26 ಉಪಜಾತಿಗಳ ಶೈಕ್ಷಣಿಕ ಮತ್ತು ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಜೆಟ್ ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಬರಬಹುದು ಎಂಬ ನಿರೀಕ್ಷೆಯಿತ್ತು. ಈ ನಿಟ್ಟಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎರಡು ದಿನದಲ್ಲಿ ನಾರಾಯಣಗುರು ನಿಗಮ ಅಸ್ತಿತ್ವಕ್ಕೆ ತರುವ ಘೋಷಣೆ ಹೊರಡಿಸುವುದಾಗಿ ಸಮುದಾಯಕ್ಕೆ ವಚನ ನೀಡಿದ್ದರು. ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಲ್ಲವ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತರುವ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.