ಬೆಳಗಾವಿಗೆ ಫೆ.27 ರಂದು ಪ್ರಧಾನಿ : ಮಹತ್ವದ ಸಭೆ ನಡೆಸಿದ ಜಿಲ್ಲಾಡಳಿತ

ಯುವ ಭಾರತ ಸುದ್ದಿ ಬೆಳಗಾವಿ :
ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಬೆಳಗಾವಿ ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಫೆ.20) ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು ಸೇರಿದಂತೆ ಸುಮಾರು ಒಂದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಗಣ್ಯರ ಭದ್ರತೆ, ವೇದಿಕೆ ನಿರ್ಮಾಣ, ಸಂಚಾರ ನಿರ್ವಹಣೆ, ಪಾರ್ಕಿಂಗ್ ವ್ಯವಸ್ಥೆ ಕುರಿತು ಚರ್ಚೆ ನಡೆಸಿದ ಅವರು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಸಮಯಾವಕಾಶ ಕಡಿಮೆ ಇರುವುದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ತಮಗೆ ಒಪ್ಪಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕಾರ್ಯಕ್ರಮದ ರೂಪುರೇಷೆ ಅಂತಿಮಗೊಂಡ ಬಳಿಕ ಮತ್ತಷ್ಟು ವಿಸ್ತೃತವಾಗಿ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಭೋಯಾರ್, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ಶ್ರೀಮತಿ ಹರಿತಾ, ಡಿಸಿಪಿ ಶೇಖರ್ ಎಸ್.ಟಿ., ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಡಿಸಿಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
YuvaBharataha Latest Kannada News