Breaking News

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Spread the love

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು :
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಅದು ಪ್ರಸ್ತಾಪಿಸಿದೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢವಾದ ಮತ್ತು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದು ಹೇಳಿದೆ.
ಅಧಿಕಾರಕ್ಕೆ ಬಂದ 1 ವರ್ಷದೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಇತರ ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ.
ಕಾಂಗ್ರೆಸ್‌ ಪಕ್ಷವು ಉಚಿತ ಉಡುಗೊರೆಗಳ ಗ್ಯಾರಂಟಿಯನ್ನು ಪುನರುಚ್ಚರಿಸಿದೆ. ಗೃಹ ಜ್ಯೋತಿ (ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಭರವಸೆ), ಗೃಹ ಲಕ್ಷ್ಮಿ (ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಮಾಸಿಕ ರೂ 2,000), ಅನ್ನ ಭಾಗ್ಯ (ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರ ಧಾನ್ಯಗಳು), ಯುವ ನಿಧಿ (ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ಭತ್ಯೆಯಾಗಿ ಪ್ರತಿ ತಿಂಗಳು 3,000 ರೂ. ಮತ್ತು ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ ಪ್ರತಿ ತಿಂಗಳು ₹ 1,500 ), ಮತ್ತು ಶಕ್ತಿ (ಸಾಮಾನ್ಯ KSRTC/BMTC ಬಸ್ಸುಗಳಲ್ಲಿ ರಾಜ್ಯದಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ) ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ.

‘ಆರನೇ ಗ್ಯಾರಂಟಿ’ ಎಂಬಂತೆ ರಾಜ್ಯದಲ್ಲಿ ಗೆಲುವು ಸಾಧಿಸಿದರೆ ಸರ್ಕಾರ ರಚನೆಯ ಮೊದಲ ದಿನದ ಮೊದಲ ಸಂಪುಟ ಸಭೆಯಲ್ಲಿ ಈ ಭರವಸೆಗಳನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಹೇಳಿದರು.
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಬೆಂಗಳೂರು ನಗರಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಮುಖ್ಯವಾಗಿ ಕಾಂಗ್ರೆಸ್​, ಈಗಿರುವ ಒಟ್ಟಾರೆ ಮೀಸಲಾತಿಯನ್ನು ಶೇ.50ರಿಂದ ಶೇ75ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಸರ್ವಜನಾಂಗದ ಶಾಂತಿಯ ತೋಟಕ್ಕೆ ಕಾಂಗ್ರೆಸ್ ಬದ್ಧತೆ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು.
ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.
ಕೇಂದ್ರವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಕೇಂದ್ರ ಸರ್ಕಾರವು ಪಿಎಫ್‌ ಐ ಅನ್ನು ನಿಷೇಧಿಸಿತ್ತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

11 − 3 =