ಭಾರೀ ಅಚ್ಚರಿ ಹೇಳಿಕೆ ನೀಡಿದ ಮಾಜಿ ಪ್ರಧಾನಿ
ಬೆಂಗಳೂರು:
ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುತ್ತಿದ್ದೇನೆ. ಅದು ದೇಶದ ಆಸ್ತಿ ಹಾಗೂ ದೇಶದ ಕಾರ್ಯಕ್ರಮ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ ಹಾಗೂ ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿಯೂ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರೋ ಇಲ್ಲವೋ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.