ಗ್ರಾಪಂ ಚುನಾವಣೆ: ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ
ಯುವಭಾರತ ಸುದ್ದಿ ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.
ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಗುರುವಾರ (ಡಿ.17) ಭೇಟಿ ನೀಡಿ ಅವರು ಮಾತನಾಡಿದರು.
ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಕಿತ್ತೂರು, ಬೈಲಹೊಂಗಲ, ಗೋಕಾಕ, ಮೂಡಲಗಿ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ತರಬೇತಿ ನಿರತ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಇದೇ ವೇಳೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಿದ್ಧತೆಗಳನ್ನು ಪರಿಶೀಲಿಸಿದರು.
ಗೋಕಾಕ ಮತ್ತು ಮೂಡಲಗಿ ಕೇಂದ್ರಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.
ಉಳಿದ ಕಡೆಗಳಲ್ಲಿ ಬೈಲಹೊಂಗಲ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.