ಶಿವರಾತ್ರಿ ಬೆನ್ನಲ್ಲೇ ಪಕ್ಷಾಂತರ ಜೋರು !

ಜೆಡಿಎಸ್ ಸೇರಿದ ಮಾಜಿ ಎಂಎಲ್‌ಸಿ ಎಸ್.ಎಲ್. ಘೋಟ್ನೇಕರ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ.
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಮಾತ್ರ ಇರುವಾಗ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಯಾಗಿದ್ದಾರೆ.
ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಉತ್ತರ ಕನ್ನಡ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಕೋಲಾರದ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಮತ್ತು ಕೋಚಿಮುಲ್ ನಿರ್ದೇಶಕ ವಡಗೂರು ಹರೀಶ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಈ ಮೂವರಿಗೆ ಪಕ್ಷದ ಧ್ವಜ ನೀಡಿ, ಜೆಡಿಎಸ್ ಶಾಲು ಹೊದಿಸಿ ಬರ ಮಾಡಿಕೊಂಡರು.ಎಸ್.ಎಲ್. ಘೋಟ್ನೇಕರ್ ಹಾಗೂ ವಡಗೂರು ಹರೀಶ್‍ಗೌಡ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಯಾದರೆ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಕುಮಾರಸ್ವಾಮಿ ಅವರು ಪಕ್ಷ ವಿಸರ್ಜನೆ ಮಾಡುತ್ತಾರೆ ಎಂದು ಹೇಳಿಕೊಂಡು ಕಾಂಗ್ರೆಸ್ ಅಧ್ಯಕ್ಷರು ತಿರುಗಾಡುತ್ತಿದ್ದಾರೆ. ಬಹುಮತ ಪಡೆದು ಅಧಿಕಾರಕ್ಕೆ ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಸವಾಲು ಹಾಕಿದ್ದೇನೆ. ಅದು ಕಾಂಗ್ರೆಸ್ ಅಧ್ಯಕ್ಷರಿಗೆ ಸರಿಯಾಗಿ ಅರ್ಥ ಆಗಿಲ್ಲ ಎಂದು ಕಾಣುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಲೇವಡಿ ಮಾಡಿದ್ದಾರೆ.
ಕೆಲವರು ನಮ್ಮ ಪಕ್ಷವನ್ನು ಲಘುವಾಗಿ ಪರಿಗಣಿಸಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಇದಕ್ಕೆ ಉತ್ತರ ಸಿಗಲಿದೆ. ನಾವು ಪಂಚರತ್ನ ಕಾರ್ಯಕ್ರಮವನ್ನು ಸುಖಾಸುಮ್ಮನೆ ಮಾಡುತ್ತಿರುವುದಲ್ಲ. ರಾಜ್ಯದ ಮಹಿಳೆಯರು, ಬಡವರು, ರೈತರ ಅವಶ್ಯಕತೆಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದು ಹೇಳಿದರು.
ಈಗಾಗಲೇ 70 ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದೇವೆ. ಉತ್ತರ ಕರ್ನಾಟಕದಲ್ಲೂ ಜನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಎಲ್ಲೆಡೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
2023ಕ್ಕೆ ಘೊಟ್ನೇಕರ್ ಮತ್ತು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಆಯ್ಕೆ ಆಗಿ ವಿಧಾನಸಭೆಗೆ ಬರುತ್ತಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಾನ ಗಳನ್ನು ಗೆಲ್ಲುವ ಅವಕಾಶ ಜೆಡಿಎಸ್‌ಗೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಆರೇಳು ಸ್ಥಾನ ಗೆಲ್ಲುವ ವಾತಾವರಣ ಇದೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಇಂಚರ ನಾರಾಯಣಸ್ವಾಮಿ, ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಕೋಲಾರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಕಾಶ, ಹುಬ್ಬಳ್ಳಿ-ಧಾರವಾಡ ಅವಳಿ ನಗರ, ಉತ್ತರ ಕನ್ನಡ ಜಿಲ್ಲೆಯ ಅನೇಕರು ಹಾಜರಿದ್ದರು.
YuvaBharataha Latest Kannada News