ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ
ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಇಂದು ರಾತ್ರಿ ಇಲ್ಲವೇ ನಾಳೆ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ.
ಹಾಲಿ ಶಾಸಕರು ಸೇರಿದಂತೆ ವರ್ಚಸ್ವಿ ಮುಖಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಸರಣಿ ಸಭೆ ನಡೆದಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು ಬಿಜೆಪಿ ಬಿಡುಗಡೆ ಮಾಡಲಿರುವ ಅಭ್ಯರ್ಥಿಗಳ ಪಟ್ಟಿಯತ್ತ ಇಡೀ ರಾಜ್ಯದ ಬಿಜೆಪಿ ಕಾರ್ಯಕರ್ತರು ತಮ್ಮ ಚಿತ್ತಹರಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ ಭಾನುವಾರ ನಡೆಯಲಿದೆ. ಸಂಜೆ 5 ಕ್ಕೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಮೊದಲ ಹಂತದ ಪಟ್ಟಿ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಜೆ.ಪಿ. ನಡ್ದಾ ಅವರ ಅಧ್ಯಕ್ಷತೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಶನಿವಾರ ತಡರಾತ್ರಿವರೆಗೂ ಸಭೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಂತಾದವರು ಈಗಾಗಲೇ ದೆಹಲಿಯಲ್ಲಿದ್ದು ಸಭೆಯಲ್ಲಿ ಭಾಗವಹಿಸಿದ್ದಾರೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ. ಹಾಲಿ ಶಾಸಕರ ಬದಲಿಗೆ ಹೊಸಬರಿಗೆ ಆದ್ಯತೆ ನೀಡಲಾಗುತ್ತಿದೆ. ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಈ ಬಾರಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ.