ಸಚಿವಾಕಾಂಕ್ಷಿಗಳಿಗೆ ಸಿಎಂ ಗುಡ್ ನ್ಯೂಸ್ !
ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಂತಿದೆ. ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ಈ ಬಗ್ಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕೇಂದ್ರದಿಂದಲೂ ಹಸಿರು ನಿಶಾನೆ ಲಭಿಸುವ ಸಾಧ್ಯತೆ ಇದ್ದು ಮುಖ್ಯಮಂತ್ರಿ ಇದೀಗ ಸಚಿವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹಾ ಶಿಕಾರಿಪುರದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಕೇಂದ್ರ ನಾಯಕತ್ವ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನ ಕೆಲ ನಾಯಕರು ತಾವೇ ಮುಖ್ಯಮಂತ್ರಿ ಎಂದು ಬಡಿದಾಡಿಕೊಳ್ಳುತ್ತಿದ್ದು ಅದು ಕೇವಲ ತಿರುಕನ ಕನಸಾಗಿದೆಯೇ ಹೊರತು ನನಸಾಗುವುದು ಸಾಧ್ಯವಿಲ್ಲ ಎನ್ನುವುದು ಅವರಿಗೂ ಸಹಾ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ತಾವು ನಿಂತಿರುವ ನೆಲ ಕುಸಿಯುತ್ತದೆ ಎಂಬ ಬಗ್ಗೆ ಅರಿವಿಲ್ಲದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಮತ್ತು ಇತರರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದು ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಯಾರ್ಯಾರು ಸಂಪುಟಕ್ಕೆ : ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಬಹುದು. ಇನ್ನೊಬ್ಬ ಮಾಜಿ ಸಚಿವ ಯೋಗೇಶ್ವರ ಸಹ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.