ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು:
ಕಾಂಗ್ರೆಸ್ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ನೀಡಲಾಯಿತು.
ವಿಧಾನಸೌಧದ ಎದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ಕೊಟ್ಟರು.
ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಪ ಮತ್ತು ಪಕ್ಷದ ಶಾಸಕರು ಕಾರ್ಯಕ್ರಮದಲ್ಲಿದ್ದರು.
ರಾಜಸ್ಥಾನಿ ಪೇಟ ಧರಿಸಿ ಬಂದ ಡಿಸಿಎಂ ಡಿಕೆಶಿ
ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜಸ್ಥಾನ ಪೇಟ ಧರಿಸಿ ಬಂದ ಡಿ.ಕೆ ಶಿವಕುಮಾರ್ ಸಭಿಕರ ಗಮನ ಸೆಳೆದರು. ರಾಜಸ್ಥಾನದಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ.
ಮಹತ್ವದ ಕಾರ್ಯಕ್ರಮ :
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಏರ್ಪಡಿಸಿದ್ದ ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಶದ್, ಹಿರಿಯ ಮುಖಂಡರಾದ ಬಿ ಕೆ ಹರಿಪ್ರಸಾದ್, ಗೋವಿಂದರಾಜ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಕೇಶ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು.
YuvaBharataha Latest Kannada News