ಅತ್ಯಾಪ್ತರೊಂದಿಗೆ ಡಿಕೆಶಿ ಮಾತುಕತೆ !
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬುಧವಾರವೂ ಮುಂದುವರಿದಿದೆ. ಪಟ್ಟು ಸಡಿಲಿಸದ ಕಾರಣ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಮನವೊಲಿಸಲು ಯತ್ನಿಸಿದರಾದರೂ ಪ್ರಯೋಜನವಾಗಿಲ್ಲ.
ಈ ಎಲ್ಲ ಬೆಳವಣಿಗೆಗಳ ನಡುವೆ ದೆಹಲಿಯಲ್ಲಿರುವ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಡಿಕೆಶಿ ತಮ್ಮ ಆಪ್ತ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಸೇರಿದಂತೆ ಹಲವು ಶಾಸಕರು ಚರ್ಚೆ ವೇಳೆ ಉಪಸ್ಥಿತರಿದ್ದರು.
ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಯ್ಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಮುಂದಿನ 48, 72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.
ಸಿಎಂ ಆಯ್ಕೆ ವಿಚಾರವಾಗಿ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಕಾರ್ಯಕರ್ತರು ಎಚ್ಚರವಹಿಸಬೇಕು. ಚರ್ಚೆ ಬಳಿಕ ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರ್ಜೇವಾಲಾ ಹೇಳಿದರು.
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ಉಭಯ ನಾಯಕರ ಜತೆ ಹೈಕಮಾಂಡ್ ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.