ಜೆಡಿಎಸ್ ನತ್ತ ಚಿತ್ತ ? ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ

ಯುವ ಭಾರತ ಸುದ್ದಿ ಶಿವಮೊಗ್ಗ:
ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ನಾಳೆ (ಏಪ್ರಿಲ್ 20 ) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಳ್ಳಂಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಟಿಕೆಟ್ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಅವರು ಹೇಳಿಲ್ಲ. ಆಯನೂರು ಮಂಜುನಾಥ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಹರಿಹಾಯುತ್ತಲೇ ಬಂದಿದ್ದರು. ಪಕ್ಷೇತರರಾಗಿ ಸ್ಪರ್ಧಿಸುವುದಾಗಿಯೂ ಹೇಳಿಕೊಂಡಿದ್ದರು.
YuvaBharataha Latest Kannada News