ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ
ನವದೆಹಲಿ:
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಯೂ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಿದರು.
ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್ ಏಕೈಕ ಡಿಸಿಎಂ ಆಗಿರಲಿದ್ದಾರೆ. ಜತೆಗೆ 2024 ಲೋಕಸಭೆ ಚುನಾವಣೆ ವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದೂ ವೇಣುಗೋಪಾಲ್ ಹೇಳಿದರು.
ಇಂದು ಸಂಜೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಔಪಚಾರಿಕವಾಗಿ ಆಯ್ಕೆಯಾಗಲಿದ್ದಾರೆ ಎಂದರು.
ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಿಎಂ, ಡಿಸಿಎಂ ಮತ್ತು ಸಚಿವರು ಪ್ರತಿಜ್ಞಾ ವಿಧಿ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.