ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ
ಬೆಂಗಳೂರು :
ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ.
ಇತ್ತೀಚಿನ ದಿನಗಳಲ್ಲಿ ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿತ್ತು.
ಭಕ್ತರು ದೇವಾಲಯದ ಒಳಗೆ ಪ್ರವೇಶಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕಾಗ್ರತೆಗೆ ತೊಂದರೆಯಾಗುತ್ತಿದೆ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಬಾರದು, ಮೊಬೈಲ್ ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಪಡೆಯಬೇಕು ಎಂದು ಸೂಚಿಸಲಾಗಿದೆ.