ಬೆಳಗಾವಿ :
ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜುಲೈ ೧೯ ರ ಸಂಜೆ ಮುಖ್ಯಮಂತ್ರಿಗಳು ನೋಂದಣಿಗೆ ಚಾಲನೆ ನೀಡಿದ ಬಳಿಕ ರಾಜ್ಯದಾದ್ಯಂತ ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಆರಂಭಗೊಳ್ಳಲಿದೆ. ಸರಕಾರದ ನಿರ್ದೇಶನದಂತೆ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ.
ಜಿಲ್ಲೆಯಲ್ಲಿರುವ ಪಡಿತರ ಚೀಟಿ ಕಾರ್ಡುಗಳು ಹಾಗೂ ಮಹಿಳೆಯರು ಮನೆಯ ಯಜಮಾನತಿಯಾಗಿರುವ ಬಗ್ಗೆ ಈಗಾಗಲೇ ಮಾಹಿತಿಯನ್ನು ಸಂಗ್ರಹಿಸಲಾಗಿರುತ್ತದೆ. ಫಲಾನುಭವಿಗಳ ಸುಗಮ ನೋಂದಣಿಗೆ ಅನುಕೂಲವಾಗುವಂತೆ ಅಗತ್ಯವಿರುವ ಕಂಪ್ಯೂಟರ್, ಅಂತರ್ಜಾಲ ಸಂಪರ್ಕ ಹಾಗೂ ಪರ್ಯಾಯ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲ ಬಗೆಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.
ಇದಕ್ಕೂ ಮುಂಚೆ ನಡೆದ ಜಿಲ್ಲಾಧಿಕಾರಿಗಳ ಜತೆಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಅವರು, ಜು.೧೯ ರ ಸಂಜೆ ೫ ರ ನಂತರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ಮಾರನೇ ದಿನದಿಂದ ನೋಂದಣಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ನೋಂದಣಿಗೆ ಆಗಮಿಸುವ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಬೇಕು. ಮಳೆಗಾಲ ಇರುವುದರಿಂದ ಸರದಿಯಲ್ಲಿ ನಿಲ್ಲಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು.
ನೋಂದಣಿ ಕೇಂದ್ರಗಳಲ್ಲಿ ಸ್ಥಳೀಯ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಬೇಕು. ಇದರಿಂದ ನೋಂದಣಿ ಪ್ರಕ್ರಿಯೆ ಮೇಲ್ವಿಚಾರಣೆ ಕೂಡ ಸುಗಮವಾಗಲಿದೆ. ಆದ್ದರಿಂದ ಪ್ರತಿ ನೋಂದಣಿ ಕೇಂದ್ರಗಳಲ್ಲಿ ಮೇಲ್ವಿಚಾರಣಾಧಿಕಾರಿಗಳು ಹಾಗೂ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಆರ್. ನಾಗರಾಜ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಉಪಸ್ಥಿತರಿದ್ದರು.