ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಮೋದಿ, ಷಾ, ಯೋಗಿ ಕರ್ನಾಟಕ ಪ್ರವಾಸ
ಯುವ ಭಾರತ ಸುದ್ದಿ ಬೆಂಗಳೂರು :
ಮಾಡು ಇಲ್ಲವೇ ಮಾಡಿ ಎನ್ನುವ ರೀತಿಯಲ್ಲಿ ಈ ಬಾರಿ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯನ್ನಾಗಿ ಪರಿಗಣಿಸಿದೆ. ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.
ರಾಜ್ಯದಲ್ಲಿ ಚುನಾವಣೆ ಆರ್ಭಟ ತುಸು ಜೋರಾಗಿದೆ. ಕಮಲ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕರುನಾಡಿನತ್ತ ಚಿತ್ತ ಹರಿಸಿದ್ದಾರೆ.
ಮೇ ತಿಂಗಳ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಉಭಯ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ಅವರು ಮುಲ್ಕಿ- ಮೂಡಬಿದಿರೆ ವಿಧಾನಸಭಾ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕುಂದಾಪುರ ಹಾಗೂ ಬೈಂದೂರು ಮತ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ ಹಾಗೂ ಗೋವಾ
ಸೇರಿದಂತೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸಚಿವರು ಕರ್ನಾಟಕಕ್ಕೆ ಆಗಮಿಸಿ ಭರ್ಜರಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.