ಕಾಂಗ್ರೆಸ್ ನಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ !
ಯುವ ಭಾರತ ಸುದ್ದಿ ದೆಹಲಿ :
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲ ತಿಂಗಳುಗಳಿಂದ ಭಾರೀ ಚರ್ಚೆ ನಡೆಯುತ್ತಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ನಡುವೆ ವಾಕ್ ಸಮರವೇ ನಡೆಯುತ್ತಿದೆ.
ಇದೀಗ ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ನೀಡಿರುವ ಹೇಳಿಕೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.
ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾನು ಮತ್ತು ಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ ಜೀವನದ ಕೊನೆಯ ಚುನಾವಣೆಯಾಗಿದೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ.
ಇದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಇನ್ನಷ್ಟು ಕಂದಕ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.