ಪ್ರಧಾನಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಯುವ ಭಾರತ ಸುದ್ದಿ ಬೆಳಗಾವಿ :
ಪ್ರಧಾನಮಂತ್ರಿಗಳ ವೇದಿಕೆ ಕಾರ್ಯಕ್ರಮ ಹಾಗೂ ರೋಡ್ ಶೋ ಯಶಸ್ಸಿಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸುವ ಮೂಲಕ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸಭೆಗಳನ್ನು ನಡೆಸಿ ವೇದಿಕೆ ನಿರ್ಮಾಣ, ಊಟ, ಭದ್ರತೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲಾಗಿತ್ತು.
ಲಕ್ಷಾಂತರ ಜನರು ಭಾಗವಹಿಸಲಿರುವುದರಿಂದ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಿರಲಿ ಎಂಬ ಉದ್ಧೇಶದಿಂದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಂದ ಕಾಲಕಾಲಕ್ಕೆ ಸಲಹೆ-ಮಾರ್ಗದರ್ಶನಗಳನ್ನು ಪಡೆದುಕೊಂಡು ಎಲ್ಲ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಒದಗಿಸುವಲ್ಲಿ ಅಧಿಕಾರಿಗಳು ಸಫಲರಾದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡಿಮೆ ಸಮಯದಲ್ಲಿ ಹಗಲಿರುಳು ಶ್ರಮಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಲು ಕಾರಣೀಭೂತರಾಗಿರುತ್ತಾರೆ ಎಂದು ತಿಳಿಸಿದರು.
ಇದೇ ರೀತಿ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಕೂಡ ಸಾಕಷ್ಟು ಸಹಕಾರಿಯಾಯಿತು. ಒಟ್ಟಾರೆ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಸೇರಿದಂತೆ ಕಂದಾಯ, ಪೊಲೀಸ್ ಸೇರಿದಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು, ಸಮಿತಿಗಳ ಸದಸ್ಯರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.